News and Events
ಉಜಿರೆ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ: ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಶಸ್ತ್ರಚಿಕಿತ್ಸೆ ಯಶಸ್ವಿ
ಉಜಿರೆ, ಆ.19: ಗರ್ಭಕಂಠದ ಸಮಸ್ಯೆಯಿಂದ ಬಳಲುತ್ತಿದ್ದ ಈರ್ವರಿಗೆ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಶಸ್ತ್ರಚಿಕಿತ್ಸೆಯನ್ನು ಇಲ್ಲಿನ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ.
ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು ಹಾಗೂ ಅರಿವಳಿಕೆ ತಜ್ಞರ ತಂಡ ಶಸ್ತ್ರಚಿಕಿತ್ಸೆ ನಡೆಸಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾದ ಇಬ್ಬರು ಮಹಿಳೆಯರು ಅತೀ ಕಡಿಮೆ ಅವಧಿಯಲ್ಲಿ ಚೇತರಿಸಿಕೊಂಡು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಲ್ಯಾಪ್ರೋಸ್ಕೋಪಿಕ್ ಶಸ್ತ್ರಚಿಕಿತ್ಸೆಯನ್ನು ಕೀಹೋಲ್ ಸರ್ಜರಿ ಎಂದೂ ಕರೆಯಲಾಗುತ್ತದೆ. ಟೆಲಿಸ್ಕೋಪ್ ಮತ್ತು ಸಣ್ಣ ವೀಡಿಯೋ ಕ್ಯಾಮೆರಾವನ್ನು ಹೊಂದಿರುವ ಸಣ್ಣ ಟ್ಯೂಬ್ ಮೂಲಕ ಈ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗುತ್ತದೆ. ಅತೀ ಚಿಕ್ಕ ಗಾಯವಾಗುವುದರಿಂದ ರೋಗಿ ಬಹಳ ಬೇಗನೇ ಚೇತರಿಸಿಕೊಳ್ಳುತ್ತಾರೆ. ಈ ಶಸ್ತ್ರಚಿಕಿತ್ಸೆಯಲ್ಲಿ ಕಡಿಮೆ ನೋವು, ಕಡಿಮೆ ರಕ್ತಸ್ರಾವ ಹಾಗೂ ಸೋಂಕಿನ ಅಪಾಯ ಕಡಿಮೆ ಇರುತ್ತದೆ ಎಂದು ಆಸ್ಪತ್ರೆ ತಿಳಿಸಿದೆ.
ಉಜಿರೆಯ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂರು ಮಂದಿ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಲಭ್ಯವಿದ್ದು, ಇಲ್ಲಿ ಇದುವರೆಗೆ ಬಹಳಷ್ಟು ಮಂದಿಗೆ ಗರ್ಭಕೋಶದ ಗೆಡ್ಡೆಯ ಶಸ್ತ್ರಚಿಕಿತ್ಸೆ ಮತ್ತು ಗರ್ಭಕಂಠದ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ನಗರ ಪ್ರದೇಶದ ಅಸ್ಪತ್ರೆಗಳಿಗೆ ಹೋಲಿಸಿದರೆ ಈ ಆಸ್ಪತ್ರೆಯಲ್ಲಿ ಅತ್ಯಂತ ಕಡಿಮೆ ದರದಲ್ಲಿ ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗುತ್ತಿದೆ. ಯಶಸ್ವಿ ಶಸ್ತ್ರಚಿಕಿತ್ಸೆಗಳ ಬಗ್ಗೆ ಡಾ| ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವೀ. ಹೆಗ್ಗಡೆ ಹಾಗೂ ಡಿ. ಹರ್ಷೇಂದ್ರ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.